ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಕಡ್ಡಾಯವಾಗಿ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ಬುಧವಾರ ಮಹತ್ವದ ಆದೇಶ ಹೊರಡಿಸಿದೆ.
ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ‘ಎ, ಬಿ, ಸಿ’ ಗ್ರೇಡ್ ಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಇದು ಪರ – ವಿರೋಧ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರದ ನಿರ್ಧಾರದ ವಿರುದ್ದ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಸೇರಿದಂತೆ ಮೂವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನ್ಯಾಯಮೂರ್ತಿ ಇ ಎಸ್ ಇಂದಿರೇಶ್ ನೇತೃತ್ವದ ನ್ಯಾಯ ಪೀಠ ಸದರಿ ಅರ್ಜಿಯ ವಿಚಾರಣೆ ನಡೆಸಿತ್ತು. ಕೇಂದ್ರ ಸರ್ಕಾರದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇವಲ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಗ್ರೇಡ್ ಪರಿಗಣಿಸುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.ವಿದ್ಯಾರ್ಥಿಗಳ ವಾದಕ್ಕೆ ಹೈಕೋರ್ಟ್ ಮನ್ನಣೆ ನೀಡಿದೆ. ಗ್ರೇಡಿಂಗ್ ಪದ್ದತಿಯು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್‌ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಕೆ ನೀಡಿದೆ.ಹಿನ್ನಡೆ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದ ವೇಳೆಯೇ, ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲು ಗ್ರೇಡ್ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಮತ್ತು ವಾರ್ಷಿಕ ಪರೀಕ್ಷೆಯ ಅಂಕವನ್ನು 525 ಕ್ಕೆ ಇಳಿಕೆ ಮಾಡಿತ್ತು.













Leave a Reply