ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬೆಳಪು ವಿಜ್ಞಾನ ಸಂಶೋಧನಾ ಕೇಂದ್ರಕ್ಕೆ ವಿಧಾನಮಂಡಲ ಅಧೀನ ಶಾಸನ ರಚನಾ ಸಮಿತಿ ಭೇಟಿ

ಕಾಪು, ಜು. 24: ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಗುರುವಾರ ಬೆಳಪು ವಿಜ್ಞಾನ ಸಂಶೋಧನಾ ಕೇಂದ್ರ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿ, ನೆನೆಗುದಿಗೆ ಬಿದ್ದಿರುವ ಯೋಜನೆಯ ಪ್ರಗತಿ ಕುರಿತು ಪರಿಶೀಲನೆ ನಡೆಸಿದರು.

ಸಮಿತಿಯ ಅಧ್ಯಕ್ಷರು ಹಾಗೂ ಗುಬ್ಬಿ ಕ್ಷೇತ್ರದ ಶಾಸಕ ಗುಬ್ಬಿ ಶ್ರೀನಿವಾಸ್ (ವಾಸು), ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಟಿ.ಎ. ಶರವಣ, ಸದಸ್ಯ ಮಂಜುನಾಥ ಭಂಡಾರಿ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ ಸೇರಿದಂತೆ ಸದಸ್ಯರು ಸ್ಥಳ ವೀಕ್ಷಣೆ ನಡೆಸಿದರು.

ಈ ವೇಳೆ ಮಾತನಾಡಿದ ಟಿ.ಎ. ಶರವಣ, ಬೆಳಪು ಗ್ರಾಮದಲ್ಲಿ ದೇವಿಪ್ರಸಾದ್ ಶೆಟ್ಟಿ ಅವರ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನವಾಗದೆ ಇರುವುದನ್ನು ಸಮಿತಿ ಅಧ್ಯಯನ ಮಾಡಿದ್ದು, ಸರ್ಕಾರದ ಗಮನಕ್ಕೆ ತಂದು ಅಗತ್ಯ ಶಿಫಾರಸು ಸಲ್ಲಿಸುವ ಮೂಲಕ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದ ವಿಜ್ಞಾನ ಸಂಶೋಧನಾ ಕೇಂದ್ರ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಾಮಗಾರಿ ಪೂರ್ಣಗೊಳ್ಳದೆ ಕಟ್ಟಡ ದುರ್ಬಳಕೆಯಾಗುತ್ತಿರುವ ಬಗ್ಗೆ ತಾವು ವಿಧಾನಸಭೆಯಲ್ಲಿ ಮೂರು ಬಾರಿ ಪ್ರಸ್ತಾಪಿಸಿದ್ದಾಗಿ ತಿಳಿಸಿದರು. ಸಮಿತಿಯು ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶಿಫಾರಸು ಸಲ್ಲಿಸಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದರು.

ಮಂಜುನಾಥ ಭಂಡಾರಿ ಮಾತನಾಡಿ, ಸಂಶೋಧನಾ ಕೇಂದ್ರಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ಈ ಪ್ರದೇಶದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರದೊಂದಿಗೆ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಬಹುದು ಎಂದು ಅಭಿಪ್ರಾಯಪಟ್ಟರು.

ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ವಿಜ್ಞಾನ ಸಂಶೋಧನಾ ಕೇಂದ್ರ, ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಅಧ್ಯಯನ ನಡೆಸಲು ಸಮಿತಿ ಭೇಟಿ ನೀಡಿರುವುದು ಸಂತಸದ ವಿಷಯವಾಗಿದ್ದು, ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಯೋಜನೆಗೆ ಜೀವ ತುಂಬುವ ಭರವಸೆಯನ್ನು ಸಮಿತಿ ನೀಡಿದೆ ಎಂದು ಹೇಳಿದರು. ಭೇಟಿಯ ವೇಳೆ ವಿಧಾನಮಂಡಲ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *