ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಮುಂಜಾಗ್ರತಾ ಕ್ರಮವಾಗಿ ಗಣೇಶೋತ್ಸವ ಆಚರಿಸಿ ಡಿಜೆ ಬಳಕೆಗೆ ಅವಕಾಶವಿಲ್ಲ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಡಿವಾಯ್ಎಸ್ಪಿ ಸೈಯ್ಯದ್ ರೋಷನ್

ಬಿಸಾವಳಗಿ: ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಯಿಂದ ಅಗತ್ಯ ಅನುಮತಿ ಪಡೆದುಕೊಂಡು, ಕಾನೂನು ಮತ್ತು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಸುವ್ಯವಸ್ಥಿತವಾಗಿ ಆಚರಿಸಬೇಕು ಎಂದು ಜಮಖಂಡಿ ಡಿವಾಯ್ಎಸ್ಪಿ ಸೈಯ್ಯದ್ ರೋಷನ್ ಬಿ ಹೇಳಿದರು.

ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಸಾವಳಗಿ ಪೊಲೀಸ್ ಠಾಣೆ ವತಿಯಿಂದ ಗಣೇಶೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸ್ಥಳ, ಮಂಟಪ ಹಾಗೂ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಬೇಕು. ಅನುಮತಿ ಪಡೆದ ಸ್ಥಳದಲ್ಲಿಯೇ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಧ್ವನಿವರ್ಧಕ ಹಾಗೂ ಡಿಜೆ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಹೆಚ್ಚಿನ ಶಬ್ದ ಮಾಡಬಾರದು. ಅನುಮತಿ ಇಲ್ಲದೆ ಡಿಜೆ ಅಥವಾ ಧ್ವನಿವರ್ಧಕ ಬಳಸಲು ಅವಕಾಶ ಇರುವುದಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಗಣೇಶೋತ್ಸವದ ಸಂದರ್ಭದಲ್ಲಿ ಮೆರವಣಿಗೆ ಅಥವಾ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವವರು ಅದರ ಮಾರ್ಗ, ಪ್ರಾರಂಭದ ಸಮಯ ಹಾಗೂ ಮುಕ್ತಾಯದ ಸಮಯವನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಿ, ಸಂಬಂಧಪಟ್ಟ ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆದ ನಂತರ ವಿಧಿಸಲಾಗಿರುವ ಎಲ್ಲ ನಿಯಮಗಳು ಹಾಗೂ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಮಾದಕ ವಸ್ತುಗಳ ವಿರುದ್ಧ ಕಠಿಣ ಕ್ರಮ ಗಾಂಜಾ ಬೆಳೆಯುವುದು, ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಟ ಸೇರಿದಂತೆ ಇಂತಹ ಕಾನೂನುಬಾಹಿರ ಚಟುವಟಿಕೆಗಳು ಗಂಭೀರ ಅಪರಾಧಗಳಾಗಿವೆ. ಇಂತಹ ಪ್ರಕರಣಗಳಲ್ಲಿ ಕಠಿಣ ಕಾನೂನು ಕ್ರಮ ಹಾಗೂ ದೀರ್ಘಾವಧಿಯ ಶಿಕ್ಷೆಗೆ ಅವಕಾಶವಿದೆ. ಯುವಕರು ಹಾಗೂ ಸಾರ್ವಜನಿಕರು ಮಾದಕ ವಸ್ತುಗಳಿಂದ ದೂರವಿರಬೇಕು. ಮಾದಕ ವಸ್ತುಗಳ ವ್ಯವಹಾರ ಅಥವಾ ಇತರ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಮಾಹಿತಿ ದೊರೆತರೆ ತಕ್ಷಣ ಪೊಲೀಸರಿಗೆ ತಿಳಿಸಬೇಕು ಎಂದು ಮನವಿ ಮಾಡಿದರು.

ಸಮಾಜದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಪೊಲೀಸ್ ಇಲಾಖೆಯ ಪ್ರಮುಖ ಉದ್ದೇಶವಾಗಿದೆ. ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಸಾರ್ವಜನಿಕರು ಸಹಕರಿಸಬಾರದು ಎಂದರು. ಸಾವಳಗಿ ಪೊಲೀಸ್ ಠಾಣೆಯ ಪಿಎಸ್ಐ ಅಪ್ಪಣ್ಣ ಐಗಳಿ ಮಾತನಾಡಿ, ಗಣೇಶೋತ್ಸವ ಕಾರ್ಯಕ್ರಮ ಆಯೋಜಿಸುವವರು ಅಗತ್ಯವಿರುವ ಎಲ್ಲ ಅನುಮತಿಗಳನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು.

ಕಾರ್ಯಕ್ರಮ ನಡೆಯುವ ದಿನಾಂಕ, ಸಮಯ ಹಾಗೂ ಸ್ಥಳದ ವಿವರಗಳನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಮೆರವಣಿಗೆ ಆಯೋಜಿಸಿದ್ದಲ್ಲಿ ಅದರ ಮಾರ್ಗ ಹಾಗೂ ಸಮಯದ ವಿವರಗಳನ್ನೂ ನೀಡಬೇಕು. ಅನುಮತಿ ಪಡೆದ ಬಳಿಕ ಇಲಾಖೆಯಿಂದ ವಿಧಿಸಿರುವ ನಿಯಮ ಹಾಗೂ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದ ರೀತಿಯಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಆಚರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.ಸಭೆಯಲ್ಲಿ ಗ್ರಾಮದ ಹಿರಿಯರು, ಮುಖಂಡರು, ಯುವಕರು ಹಾಗೂ ಪೊಲೀಸ್ ಠಾಣೆಯ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗಣೇಶೋತ್ಸವ ಸ್ಥಳದಲ್ಲಿ ಕಡ್ಡಾಯ ಸಿಸಿಟಿವಿ ಗಣೇಶೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗಣೇಶೋತ್ಸವ ಮಂಡಳಿಯವರು ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದ ಎಲ್ಲ ಕಾನೂನು ಮತ್ತು ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.– ಸೈಯ್ಯದ್ ರೋಷನ್ ಬಿ,ಜಮಖಂಡಿ ಡಿವಾಯ್ಎಸ್ಪಿ

Leave a Reply

Your email address will not be published. Required fields are marked *