ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟ

ಉಡುಪಿ, ನ.11: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಕ್ರೀಡಾ ಸಬಲೀಕರಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನವೆಂಬರ್ 11 ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು.

ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಹರಿಪ್ರಸಾದ್ ರೈ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ವಿಶೇಷ ಚೇತನ ವಿದ್ಯಾರ್ಥಿಗಳು ಅಚ್ಚುಕಟ್ಟಾಗಿ ನಡೆಸಿದ ಪಥಸಂಚಲನ ಅವರನ್ನು ತರಬೇತಿಗೊಳಿಸಿದ ಸಂಸ್ಥೆಗಳ ಮತ್ತು ಪೋಷಕರ ಬದ್ಧತೆಗೆ ಹಿಡಿದ ಕನ್ನಡಿಯಾಗಿದೆ. ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ದೈಹಿಕ ಹಾಗೂ ಮಾನಸಿಕ ಕ್ಷಮತೆ ವೃದ್ಧಿಯಾಗುವುದು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ ಗಾಂವ್ಕರ್ ಅವರು, ವಿಶೇಷ ಚೇತನ ಮಕ್ಕಳನ್ನು ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಂಸ್ಥೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕ್ರೀಡಾಕೂಟದ ಔಚಿತ್ಯದ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷೆ ಚಂದ್ರಿಕಾ ಜೆ.ಪಿ., ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಕಾರ್ಯಾಧ್ಯಕ್ಷೆ ಡಾ. ಕಾಂತಿ ಹರೀಶ್, ಗೌರವಾಧ್ಯಕ್ಷೆ ಆಗ್ನೇಸ್ ಕುಂದರ್, ಉಡುಪಿ ಜಿಲ್ಲೆ ಪಾಲಕರ ಸಂಘದ ಅಧ್ಯಕ್ಷ ಜಯವಿಠಲ್, ಕಾರ್ಯದರ್ಶಿ ಶಶಿಕಲಾ ಕೋಟ್ಯಾನ್ ಉಪಸ್ಥಿತರಿದ್ದರು.

ಪಥಸಂಚಲನದ ಫಲಿತಾಂಶ: ವಿಜೇತ ಶಾಲೆ ಪ್ರಥಮ, ಮಾನಸಾ ಸ್ಪೆಷಲ್ ಸ್ಕೂಲ್ ದ್ವಿತೀಯ ಹಾಗೂ ಕಾರುಣ್ಯ ಸ್ಪೆಷಲ್ ಸ್ಕೂಲ್ ತೃತೀಯ. ದೈಹಿಕ ಶಿಕ್ಷಣ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಂದ್ರ ಎಚ್., ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *